logo

ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನ

ಡಿಸೆಂಬರ್ 14:
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಬಾಪೂಜಿ ಶೈಕ್ಷಣಿಕ ಸಂಸ್ಥೆಗಳ ಸಂಸ್ಥಾಪಕರು ಹಾಗೂ ಮಾಜಿ ಸಚಿವರಾಗಿದ್ದ ಶಾಮನೂರು ಶಿವಶಂಕರಪ್ಪ (94) ಅವರು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 14) ಸಂಜೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದಿಂದ ರಾಜ್ಯದ ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಅಪಾರ ನಷ್ಟ ಉಂಟಾಗಿದೆ. ದಾವಣಗೆರೆಯನ್ನು ಶೈಕ್ಷಣಿಕ ಕೇಂದ್ರವನ್ನಾಗಿ ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಾಪೂಜಿ ಶೈಕ್ಷಣಿಕ ಸಂಸ್ಥೆಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸಿದ್ದು ಅವರ ಜೀವನದ ಮಹತ್ವದ ಸಾಧನೆಯಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯದ ಏಕತೆ, ಶೈಕ್ಷಣಿಕ ಪ್ರಗತಿ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ರಾಜಕೀಯ ಜೀವನದಲ್ಲಿ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ರಾಜ್ಯ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸರಳ ಜೀವನ, ಜನಪರ ಚಿಂತನೆ, ಆಡಳಿತಾತ್ಮಕ ಅನುಭವ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಶಾಮನೂರು ಶಿವಶಂಕರಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಅಪಾರ ಗೌರವ ಗಳಿಸಿದ್ದರು.

ಅವರ ನಿಧನಕ್ಕೆ ರಾಜಕೀಯ ಗಣ್ಯರು,ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

55
7268 views