
ಜೂನ್ 26 ರವರೆಗೂ ಭರ್ಜರಿ ಮಳೆ; ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರಿಗೆ ಖುಷಿ ತಂದಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಈ ನಡುವೆ ಮಳೆ ಇನ್ನಷ್ಟು ಜೋರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜೂನ್ 26 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 22 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಹಾಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಆದ್ದರಿಂದ ಇನ್ನೂ 4 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದೆ. ಆದ್ದರಿಂದ ಜೂನ್ 26 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಅನ್ವಯಿಸುವಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಇಲ್ಲೆಲ್ಲ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಇವೆ.
ಇದರ ಜೊತೆಗೆ ಹಾವೇರಿ, ಧಾರವಾಡ, ಗದಗ, ಕಲಬುರಗಿ ಮುಂತಾದ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಜೂನ್ ಅಂತ್ಯದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಅಷ್ಟೇ ಅಲ್ಲ, ಜುಲೈ ತಿಂಗಳಿನಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಳ್ಳಲಿದ್ದು ಅಲ್ಲಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.