
ಗ್ರಂಥಾಲಯ, ಕಾಲೇಜು ಕೊಠಡಿಗಳು ಹಾಗೂ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ
ದಾವಣಗೆರೆ, ಜ. 06:
ನಗರದ 40ನೇ ವಾರ್ಡ್ ವ್ಯಾಪ್ತಿಯ ಆಂಜನೇಯ ಬಡಾವಣೆಯಲ್ಲಿ ಸ್ಥಿತಿಗತವಾಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗ್ರಂಥಾಲಯ, ಹೆಚ್ಚುವರಿ ಕಾಲೇಜು ಕೊಠಡಿಗಳು ಹಾಗೂ ಸಭಾಂಗಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮಹಿಳಾ ಶಿಕ್ಷಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಿವೆ ಎಂದು ಅವರು ಹೇಳಿದರು.
ಈ ಕಾಮಗಾರಿಗಳಿಂದ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದ್ದು, ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕ ನುಡಿಯನ್ನು ಡಾ. ಎಸ್. ಪಿ. ನಾಗನಗೌಡರು ವಹಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ಕುಮಾರ್ ಎಂ. ನೆರವೇರಿಸಿದ್ದು, ವಂದನಾರ್ಪಣೆಯನ್ನು ಮಲ್ಲಿಕಾರ್ಜುನ್ ಗೌಡರು ಸಲ್ಲಿಸಿದರು.